ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಂದ ಹಿಂದೆ ಸರಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಿಂದ ಹಿಂದೆ ಸರಿದ ಕೊಹ್ಲಿ

ಮುಂಬೈ, ಜ. 22: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇದೇ ಜನವರಿ 25 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಹೈದರಾಬಾದ್​ಗೆ ಆಗಮಿಸಿದ್ದು, ಸಿದ್ದತೆಯಲ್ಲಿ ತೊಡಗಿಕೊಂಡಿವೆ. ಈ ಸರಣಿಯ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿತ್ತು. ಏತನ್ಮಧ್ಯೆ, ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಜನವರಿ 25 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುವುದಿಲ್ಲ. ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದಿರಲು ನಿರ್ಧರಿಸಿದ್ದಾರೆ ಎಂದು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯವನ್ನೂ ವಿರಾಟ್ ಕೊಹ್ಲಿ ಆಡಿರಲಿಲ್ಲ. ಮಗಳ ಜನ್ಮದಿನದ ಕಾರಣ ಕೊಹ್ಲಿ ಮೊದಲ ಟಿ20 ಪಂದ್ಯದಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಆ ಬಳಿಕ ಎರಡು ಮತ್ತು ಮೂರನೇ ಟಿ20 ಪಂದ್ಯದಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದರು. ಆದರೀಗ ಮಹತ್ವದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳನ್ನು ಕೊಹ್ಲಿ ಏಕೆ ಆಡುತ್ತಿಲ್ಲ ಎಂಬ ಮಾಹಿತಿ ಸದ್ಯಕ್ಕೆ ಹೊರಬಿದಿಲ್ಲ.

ಕೊನೆಯ 3 ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿಲ್ಲ
ವಿಶೇಷವೆಂದರೆ ಬಿಸಿಸಿಐ ಮೊದಲ ಎರಡು ಟೆಸ್ಟ್‌ಗಳಿಗೆ ಮಾತ್ರ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ಕೊಹ್ಲಿ ಹೆಸರು ಸೇರಿತ್ತು. ಎರಡು ಮತ್ತು ಮೂರನೇ ಪಂದ್ಯಗಳ ನಡುವೆ ಸುಮಾರು ಒಂದು ವಾರದ ಅಂತರವಿರುವ ಕಾರಣ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ನಂತರ ಪ್ರಕಟಿಸಲಾಗುವುದು. ಒಟ್ಟು ಐದು ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ ಎಷ್ಟು ಪಂದ್ಯಗಳನ್ನು ಆಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

Previous Post
ಬಂಗಾಳದಲ್ಲಿ ಸೀತಾರಾಮ ಮಂದಿರ ನಿರ್ಮಿಸಲು ಸಂಕಲ್ಪ ಪೂಜೆ
Next Post
ಭೂಕುಸಿತ: 44 ಸಾವು

Recent News