ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 11 ಕಾರ್ಮಿಕರ ದಾರುಣ ಸಾವು

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 11 ಕಾರ್ಮಿಕರ ದಾರುಣ ಸಾವು

ಮಧ್ಯ ಪ್ರದೇಶ, ಫೆಬ್ರವರಿ 06: ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮಂಗಳವಾರ ಭೀಕರ ದುರಂತ ಸಂಭವಿಸಿದೆ. ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹನ್ನೊಂದು ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಸ್ಫೋಟ ಸಂಭವಿಸಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಸಂಪೂರ್ಣ ಕಾರ್ಖಾನೆ ಹೊತ್ತಿ ಉರಿದಿದ್ದು, ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಬೆಂಕಿ ಹೊತ್ತಲು ಕಾರಣ ಏನು ಎನ್ನುವುದು ಈವರೆಗೆ ತಿಳಿದು ಬಂದಿಲ್ಲ.

ಸದ್ಯ ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗಿದೆ. ಹಲವು ಮಂದಿ ಕಾರ್ಖಾನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸದ್ಯ 400 ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಟಾಕಿ ಕಾರ್ಖಾನೆಯ ಬೆಂಕಿ ಕೆನ್ನಾಲಿಗೆ ಸುತ್ತಲಿನ ಪ್ರದೇಶಕ್ಕೂ ಹರಡುತ್ತಿದ್ದು, ದಟ್ಟ ಹೊಗೆ ಎಲ್ಲೆಡೆ ಆವರಿಸುತ್ತಿದೆ. ಇದರಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಸದ್ಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಬೆಂಕಿ ಆರಿಸಲು ಹರಸಾಹಸ ಪಡಲಾಗುತ್ತಿದೆ. ಘಟನಾ ಸ್ಥಳದಲ್ಲಿ 50ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿದ್ದು, ಪಟಾಕಿ ಕಾರ್ಖಾನೆ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಮಧ್ಯ ಪ್ರದೇಶದಲ್ಲಿ ನಡೆದ ಸ್ಫೋಟದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಇನ್ನು ಕೇಂದ್ರ ಸರ್ಕಾರದ ಪಿಎಂಎನ್‌ಆರ್‌ಎಫ್‌ನಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ನೀಡಲಾಗುವುದು ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.

Previous Post
ಏಕರೂಪ ನಾಗರಿಕ ಸಂಹಿತೆ ಪರಿಚಯಿಸಿದ ಉತ್ತರಾಖಂಡ
Next Post
ಜ್ಞಾನವಾಪಿ ವಿವಾದ: ಫೆ.15ಕ್ಕೆ ವಿಚಾರಣೆ

Recent News