ನಾವು ಒಗ್ಗಟ್ಟಾಗಿದ್ದೇವೆ; ಒಗ್ಗಟ್ಟಾಗಿಯೇ ಇರುತ್ತೇವೆ: ‘ಇಂಡಿಯಾ’ ಸಭೆ ಬಳಿಕ ಖರ್ಗೆ

ನಾವು ಒಗ್ಗಟ್ಟಾಗಿದ್ದೇವೆ; ಒಗ್ಗಟ್ಟಾಗಿಯೇ ಇರುತ್ತೇವೆ: ‘ಇಂಡಿಯಾ’ ಸಭೆ ಬಳಿಕ ಖರ್ಗೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಾಗಿಯೇ ಇರುತ್ತೇವೆ.ನಮ್ಮನ್ನು ವಿಭಜಿಸಲು ಪ್ರಯತ್ನಿಸಬೇಡಿ’ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಎನ್‌ಸಿಪಿ ನಾಯಕ ಶರದ್‌ ಪವಾರ್‌, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್‌ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.’ನಾವು 295ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ಇಂಡಿಯಾ ಮೈತ್ರಿಕೂಟ ಗೆಲ್ಲುವು ಸಾಧಿಸಲಿದೆ. ಫಲಿತಾಂಶದ ಬಳಿಕ ನಾವು ಪ್ರಧಾನಿ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಆದರೆ, ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ಬಿಜೆಪಿಗರ ‘ಚಾರ್‌ ಸೌ ಪಾರ್’ (400 ಸ್ಥಾನ ದಾಟುತ್ತೇವೆ) ಚಿತ್ರ ಫ್ಲಾಪ್ ಆಯಿತು’ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವ್ಯಂಗ್ಯವಾಡಿದ್ದಾರೆ.ಉತ್ತರ ಪ್ರದೇಶದಲ್ಲಿ ಬಿಜೆಪಿಯ ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಮತ್ತು ‘ಇಂಡಿಯಾ’ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಲೋಕಸಭಾ ಚುನಾವಣೆಗೆ ಇಂದು ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮೊದಲು ಮೈತ್ರಿಕೂಟದ ಕಾರ್ಯತಂತ್ರವನ್ನು ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Previous Post
ಮತದಾನೋತ್ತರ ಸಮೀಕ್ಷೆಗಳಲ್ಲಿ 350ಕ್ಕಿಂತ ಹೆಚ್ಚು ಸ್ಥಾನ ಪಡೆಯಲಿರುವ ಎನ್‌ಡಿಎ; ಇಂಡಿಯಾ ಮೈತ್ರಿಕೂಟಕ್ಕೆ 125-150 ಸ್ಥಾನ
Next Post
40% ಕಮಿಷನ್​ ಆರೋಪ; ಸಿಎಂ-ಡಿಸಿಎಂಗೆ ಜಾಮೀನು ಮಂಜೂರು

Recent News