ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಸೈಯದ್ ಖಾಲಿದ್ ಅಹ್ಮದ್ ನೇಮಕ

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಸೈಯದ್ ಖಾಲಿದ್ ಅಹ್ಮದ್ ನೇಮಕ

ನವದೆಹಲಿ : ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ನ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ದಾವಣಗೆರೆಯ ಕಾಂಗ್ರೆಸ್ ನ ಹಿರಿಯ ಮುಖಂಡ ಸೈಯದ್ ಸೈಫುಲ್ಲಾ ಅವರ ಪುತ್ರ ಸೈಯದ್ ಖಾಲಿದ್ ಅಹ್ಮದ್ ಅವರ ಕಾರ್ಯವೈಖರಿ ಗುರುತಿಸಿ ಈ ನೇಮಕ ಮಾಡಲಾಗಿದೆ. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು. ಮಾತ್ರವಲ್ಲ, ಹಗಲಿರುಳು ತನಗೆ ವಹಿಸಿದ್ದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಅಲ್ಲಿಯೇ ಉಳಿದು ತಿಂಗಳುಗಟ್ಟಲೇ ಪ್ರಚಾರ ನಡೆಸಿದ್ದರು.

ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದ್ದರು. ತನಗೆ ವಹಿಸಿದ್ದ ಜವಾಬ್ಜಾರಿ ನಿಭಾಯಿಸಿ ಎಐಸಿಸಿ ನಾಯಕರ ಮನ ಗೆದ್ದಿದ್ದರು. ಈಗ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ನ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಈ ಜವಾಬ್ದಾರಿ ನೀಡಲಾಗಿದೆ.

ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ದಾವಣಗೆರೆ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ಹಲವೆಡೆ ಪ್ರಚಾರ ನಡೆಸಿದ್ದರು. ಸೈಯದ್ ಖಾಲಿದ್ ಅಹ್ಮದ್ ಅವರು ಕಾಂಗ್ರೆಸ್ ಪಕ್ಷವು ವಹಿಸಿದ್ದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತಿರುವ ಕಾರಣ ಈ ಹುದ್ದೆ ನೀಡಲಾಗಿದೆ.

ಎಐಸಿಸಿ, ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ಅವರೂ ಸೇರಿದಂತೆ ಕಾಂಗ್ರೆಸ್ ನ ರಾಜ್ಯ ನಾಯಕರು, ರಾಷ್ಟ್ರನಾಯಕರು ನನ್ನ ಮೇಲಿಟ್ಟಿರುವ ನಂಬಿಕೆ ಹುಸಿಗೊಳಿಸುವುದಿಲ್ಲ. ವಿಶ್ವಾಸಕ್ಕೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ. ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ. ಜೊತೆಗೆ ಪಕ್ಷ ಸಂಘಟನೆಯತ್ತಲೂ ಗಮನ ಹರಿಸುತ್ತೇನೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ತಿಳಿಸಿದ್ದಾರೆ.

Previous Post
ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ
Next Post
ವಿಶ್ವಾಸಮತ ಗೆದ್ದ ಹೇಮಂತ್ ಸೊರೇನ್

Recent News