ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935 ರದ್ದು ಅಸ್ಸಾಂ ಸರ್ಕಾರದಿಂದ ಮಹತ್ವದ ಆದೇಶ

ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935 ರದ್ದು, ಅಸ್ಸಾಂ ಸರ್ಕಾರದಿಂದ ಮಹತ್ವದ ಆದೇಶ

ಗುವಾಹಟಿ: ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಬೆನ್ನಲ್ಲೇ ಅಸ್ಸಾಂ ಸರ್ಕಾರ ಕೂಡ ಇದೇ ರೀತಿಯ ಕಾನೂನನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಅಸ್ಸಾಂ ಕ್ಯಾಬಿನೆಟ್ ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಸಭೆಯ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸಚಿವ ಜಯಂತ ಮಲ್ಲಬರುವ, ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಬಣ್ಣಿಸಿದರು.

ನಾವು ಏಕರೂಪ ನಾಗರಿಕ ಸಂಹಿತೆಯತ್ತ ಸಾಗುತ್ತಿದ್ದೇವೆ ಎಂದು ಮುಖ್ಯಮಂತ್ರಿ ಇತ್ತೀಚೆಗೆ ಹೇಳಿದ್ದಾರೆ. ಈ ಪ್ರಯಾಣದಲ್ಲಿ ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 (Assam Muslim Marriage and Divorce Registration Act, 1935), ಅಡಿಯಲ್ಲಿ 94 ಮುಸ್ಲಿಂ ರಿಜಿಸ್ಟ್ರಾರ್ ಇನ್ನೂ ಕಾರ್ಯನಿರ್ವಹಿಸುತ್ತಿದ್ದಾರೆ. ಅದನ್ನು ಇಂದು ರದ್ದುಗೊಳಿಸಲಾಗಿದೆ. ಇನ್ನುಮುಂದೆ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿ’ಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನೋಂದಣಾಧಿಕಾರಿಗಳು ವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

ಈ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು ಮತ್ತು ಪ್ರತಿ ವ್ಯಕ್ತಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಘೋಷಿಸಿದರು. ಈ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಫೆ.23ರಂದು ಅಸ್ಸಾಂ ಕ್ಯಾಬಿನೆಟ್ ಹಳೆಯ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಈ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಬರೆದುಕೊಂಡಿದ್ದಾರೆ.

Previous Post
ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!
Next Post
ರೈತರ ದೆಹಲಿ ಚಲೋ ದೇಶದಾದ್ಯಂತ ವಿಸ್ತರಿಸುವ ಸಾಧ್ಯತೆ

Recent News