ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜೀನಾಮೆ

ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಒತ್ತಡ ಹೆಚ್ಚುತ್ತಿದ್ದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ ಬಿ.ನಾಗೇಂದ್ರಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಸ್‌ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರ ಜತೆಗೆ 50 ಕೋಟಿ ರೂ.ಗೂ ಹೆಚ್ಚಿನ ಹಣ ದುರುಪಯೋಗವಾಗಿರುವ ಕಾರಣದಿಂದಾಗಿ ಸಿಬಿಐ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.ತನಿಖೆಗೆ ಮುಂದಾಗಿರುವ ಸಿಬಿಐ ಒಂದು ವೇಳೆ ಸಚಿವ ನಾಗೇಂದ್ರ ಅವರನ್ನು ಬಂಧಿಸಿದರೆ ಅಥವಾ ವಿಚಾರಣೆಗೊಳಪಡಿಸಿದರೆ ಸರ್ಕಾರಕ್ಕೆ ಮುಜುಗರ ಉಂಟಾಗುವ ಸಾಧ್ಯತೆಗಳಿವೆ ಎಂಬ ಅಂಶದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿತ್ತು. ಕೆಲ ದಿನಗಳ ಹಿಂದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕೂಡಾ ಸಚಿವರ ರಾಜೀನಾಮೆ ಪಡೆದು ಮುಖಭಂಗ ತಪ್ಪಿಸಿ ಎಂದು ಸಿಎಂಗೆ ಸೂಚಿಸಿದ್ದರು. ಹೀಗಾಗಿ ನಾಗೇಂದ್ರ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Box news – DKS

“ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, “ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು” ಎಂದರು. ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, “ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ” ಎಂದರು.

Previous Post
9 ರಂದು ಸಂಜೆ 6 ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ..! ವಿಶ್ವ ನಾಯಕರು ಭಾಗಿ ಸಾಧ್ಯತೆ
Next Post
ಲೋಕಸಭಾ ಚುನಾವಣೆ ‘ಮಾದರಿ ನೀತಿ ಸಂಹಿತೆ’ ವಾಪಾಸ್: ಚುನಾವಣಾ ಆಯೋಗ

Recent News