ಸಿಬಿಐ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

ಸಿಬಿಐ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಿಬಿಐ ಬಂಧನವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಕೇಜ್ರಿವಾಲ್ ಅವರನ್ನು ಬಂಧಿಸಲು ಸಾಕಷ್ಟು ಆಧಾರಗಳಿವೆ. ನ್ಯಾಯಸಮ್ಮತ ಕಾರಣವಿಲ್ಲದೆ ಬಂಧನವಾಗಿದೆ ಎಂದು ಹೇಳಲಾಗದು ಎಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಹೇಳಿದ್ದಾರೆ.

ಇದೇ ವೇಳೆ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಕೇಜ್ರಿವಾಲ್‌ಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿತು. ಕೇಜ್ರಿವಾಲ್ ಅವರು ಜಾಮೀನು ಕೋರಿ ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಹತೆಯ ಆಧಾರದ ಮೇಲೆ ಅರ್ಜಿಯನ್ನು ನಿರ್ಧರಿಸಲು ನಿರಾಕರಿಸಿದ ಹೈಕೋರ್ಟ್‌ ವಿಚಾರಣಾ ನ್ಯಾಯಾಲಯಕ್ಕೆ ತೆರಳುವಂತೆ ತಿಳಿಸಿತು.

ತಾವು ಜೈಲಿನಿಂದ ಹೊರಬರುವುದನ್ನು ತಡೆಯಲು ಸಿಬಿಐ ತಮ್ಮನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿದೆ ಎಂದು ಕೇಜ್ರಿವಾಲ್‌ ದೂರಿದ್ದರೆ, ಅಬಕಾರಿ ನೀತಿ ಪ್ರಕರಣದ ಸೂತ್ರಧಾರ ದೆಹಲಿ ಮುಖ್ಯಮಂತ್ರಿ ಎಂದು ಸಿಬಿಐ ವಾದಿಸಿತ್ತು. ಜಾರಿ ನಿರ್ದೇಶನಾಲಯ (ಇ ಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು.

ನಂತರ ಇಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತಾದರೂ ಸಿಬಿಐ ಪ್ರಕರಣದಲ್ಲಿ ಇನ್ನೂ ಜಾಮೀನು ಸಿಗದ ಕಾರಣ ಅವರು ಜೈಲಿನಲ್ಲೇ ಇದ್ದರು. ಅರ್ಜಿ ವಜಾ ಬೆನ್ನಲೆ ಅರವಿಂದ್ ಕೇಜ್ರಿವಾಲ್ ಈಗ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

Previous Post
ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಶೇಖ್ ಹಸೀನಾ
Next Post
77 ಜಾತಿಗಳನ್ನು ಓಬಿಸಿ ಸೇರ್ಪಡೆ ರದ್ದು ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ

Recent News