5 ಗ್ಯಾರಂಟಿ ಅನುಷ್ಠಾನ; ಬಿಬಿಎಂಪಿ ವ್ಯಾಪ್ತಿಯ ಸಮಿತಿ ವಿವರ

5 ಗ್ಯಾರಂಟಿ ಅನುಷ್ಠಾನ; ಬಿಬಿಎಂಪಿ ವ್ಯಾಪ್ತಿಯ ಸಮಿತಿ ವಿವರ

ಬೆಂಗಳೂರು, ಜನವರಿ 31: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಪ್ರಾಧಿಕಾರ ಮತ್ತು ಸಮಿತಿಯನ್ನು ರಚನೆ ಮಾಡಿದೆ. ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ತಾಲೂಕು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮಿತಿ; ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ (28 ವಿಧಾನಸಭಾ ಕ್ಷೇತ್ರ) ರಚನೆ ಮಾಡಲಾಗುತ್ತದೆ. ಈ ಸಮಿತಿಗೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಒಬ್ಬ ಸದಸ್ಯರು ಅಧ್ಯಕ್ಷರಾಗಿರುತ್ತಾರೆ. 28 ವಿಧಾನ ಸಭಾ ಕ್ಷೇತ್ರಗಳಿಂದ ಆಯ್ದ ಸದಸ್ಯರು ಸಮಿತಿಯ ಸದಸ್ಯರಾಗಿರುತ್ತಾರೆ. ವಿಶೇಷ ಆಯುಕ್ತರು, ಬಿಬಿಎಂಪಿ (ಆಡಳಿತ) ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರನ್ನು ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ನೇಮಕ ಮಾಡಲಿದೆ. ಈ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಸಚಿವ ಸಂಪುಟ ದರ್ಜೆಯ ಸ್ಥಾನಮಾನವನ್ನು ಹೊಂದಿರುತ್ತಾರೆ.

ಉಪಾಧ್ಯಕ್ಷರು (5 ಜನ) ರಾಜ್ಯ ಸಚಿವ ಸ್ಥಾನಮಾನವನ್ನು ಹೊಂದಿರುತ್ತಾರೆ. 31 ಜಿಲ್ಲೆ ಪ್ರತಿನಿಧಿಸುವ (ಜಿಲ್ಲೆಗೆ ಒಬ್ಬರಂತೆ 31) ಸದಸ್ಯರು ಇರುತ್ತಾರೆ. ಸದಸ್ಯ ಕಾರ್ಯದರ್ಶಿಯಾಗಿ ಸರ್ಕಾರದ ಅಪರ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶಿಷ್ಟ ಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಇರುತ್ತಾರೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಗಳು, ಜವಾಬ್ದಾರಿಗಳು, ಅಧಿಕಾರಿ/ ಸಿಬ್ಬಂದಿಗಳ ನೇಮಕಾತಿ, ರಾಜೀನಾಮೆ, ಕಛೇರಿ ನಿರ್ವಹಣೆ, ಸವಲತ್ತು, ಗೌರವಧನ, ಭತ್ಯೆಗಳು ಹಾಗೂ ಇತರೆ ಯಾವುದೇ ಸಂಬಂಧಪಟ್ಟ ವಿಷಯಗಳ ಕುರಿತು ಸಕ್ಷಮ ಪ್ರಾಧಿಕಾರದ (ಸರ್ಕಾರದ) ಅನುಮೋದನೆಯೊಂದಿಗೆ ರಾಜ್ಯ ಮಟ್ಟದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಪ್ರತ್ಯೇಕವಾಗಿ ಆದೇಶ ಹೊರಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಆದೇಶ ಹೊರಡಿಸಿರುವ ವಿಮಲಾಕ್ಷಿ ಬಿ., ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ) 24/1/2024ರಲ್ಲಿ ನೀಡಿರುವ ಟಿಪ್ಪಣಿಯ ಸಹಮತಿಯೊಂದಿಗೆ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಈಗ ಸರ್ಕಾರ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಆದರೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸದಸ್ಯ ಕಾರ್ಯದರ್ಶಿರವರು ಸಕ್ಷಮ ಪ್ರಾಧಿಕಾರದ (ಸರ್ಕಾರದ) ಅನುಮೋದನೆ ಪಡೆದು ನೇಮಕ ಮಾಡಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಮುಖ ಜವಾಬ್ದಾರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಯಾಗಿರುತ್ತದೆ ಹಾಗೂ ಈ ಪ್ರಾಧಿಕಾರವು ನೀತಿ ರಚನೆ, ಸುಧಾರಣಾ ಕ್ರಮಗಳು, ಅನುಷ್ಠಾನದಲ್ಲಿ ಸರಳೀಕರಣ ಹಾಗೂ ಸಮನ್ವಯತೆ ತರುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಒಬ್ಬ ಸದಸ್ಯರು ಅಧ್ಯಕ್ಷರಾಗಿರುತ್ತಾರೆ. 5 ಸಂಖ್ಯೆಯ ಉಪಾಧ್ಯಕ್ಷರು ಇರುತ್ತಾರೆ. 15 ಸಂಖ್ಯೆಯ ಸದಸ್ಯರು ಇರುತ್ತಾರೆ. ಆಯಾ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಒಬ್ಬ ಸದಸ್ಯರು ಅಧ್ಯಕ್ಷರಾಗಿರುತ್ತಾರೆ. 14 ಸಂಖ್ಯೆಯ ಸದಸ್ಯರು ಇರುತ್ತಾರೆ. ಕಾರ್ಯ ನಿರ್ವಹಣಾಧಿಕಾರಿ (ಇಓ) ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

Previous Post
ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ಬಾರಿ ಮಯಾಂಕ್ ಅಗರ್ವಾಲ್ ಪ್ರತಿಕ್ರಿಯೆ
Next Post
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಸತತ ಆರನೇ ಬಾರಿ ಬಜೆಟ್ ಮಂಡನೆ

Recent News