ನವದೆಹಲಿ : ಹರಿಯಾಣ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿರುವ ಹೊತ್ತಲ್ಲೇ ಖ್ಯಾತ ಕುಸ್ತಿಪುಟಗಳಾದ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು ಚುನಾವಣೆ ಸ್ಫರ್ಧೆ ಬಗ್ಗೆ ಚರ್ಚೆ ಶುರುವಾಗಿದೆ. ರಾಹುಲ್ ಗಾಂಧಿ ಬೆನ್ನಲೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನೂ ಭೇಟಿಯಾಗಿದ್ದು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ ಆದರೆ ಪುನಿಯಾ ಮತ್ತು ಫೋಗಟ್ ಅವರನ್ನು ಚುನಾವಣಾ ಕಣದಲ್ಲಿ ಕಣಕ್ಕಿಳಿಸಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಕಾಂಗ್ರೆಸ್ ಮೌನವಹಿಸಿದ್ದು ಗುರುವಾರದ ವೇಳೆಗೆ ಸ್ಪಷ್ಟತೆ ಸಿಗುವ ಸಾಧ್ಯತೆಗಳಿದೆ.
ಸದ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ರಾಹುಲ್ ಗಾಂಧಿಯವರ ಚಿತ್ರವನ್ನು ಪೋಸ್ಟ್ ಮಾಡಿದೆ. ಪುನಿಯಾ ಮತ್ತು ಫೋಗಟ್ ಅವರು 2023 ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಆಗಿನ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಮಾಡಿ ಅವರು ವಿರುದ್ಧದ ಪ್ರತಿಭಟನೆ ನಡೆಸಿದ್ದರು.
ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದವರೆಗೆ 90 ಸ್ಥಾನಗಳ ಪೈಕಿ 66 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದೆ. ಆದರೆ ಇನ್ನೂ ಹೆಸರುಗಳನ್ನು ಪ್ರಕಟಿಸಿಲ್ಲ. ಇನ್ನೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 5 ರಂದು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.